ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ಕಾರು ಬೈಕ್ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ.
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಂದೂವರೆ ವರ್ಷದ ಮಗು ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ತಾಯಮ್ಮ (55), ಜ್ಯೋತಿ (28) ಹಾಗೂ ಒಂದೂವರೆ ವರ್ಷದ ಮಗು ದಿವ್ಯ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಲಕ್ಷ್ಮಣ್ ಮತ್ತು ಅವರ ಪುತ್ರಿ ಸೃಷ್ಟಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಕುಟುಂಬದವರು ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದಲ್ಲಿ ನಡೆದ ಶುಭಕಾರ್ಯದಲ್ಲಿ ಭಾಗವಹಿಸಿ ಬೈಕ್ನಲ್ಲಿ ತಮ್ಮ ಊರಿಗೆ ಮರಳುತ್ತಿದ್ದರು. ಈ ವೇಳೆ ಧರ್ಮಸಾಗರ ಗ್ರಾಮದ ಬಳಿ ಹಿಂಬದಿಯಿಂದ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.