Belagavi ಜಿಲ್ಲೆಯ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ..
Belagavi : ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗೋಕಾಕ ತಾಲೂಕಿನ ಮಾಲದಿನ್ನಿ ಕ್ರಾಸ್ ಬಳಿ ನಡೆದಿದೆ.
ಪುಣೆಯಿಂದ ಸವದತ್ತಿ ಕಡೆಗೆ ಕುಟುಂಬವೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ವರದಿಯಾಗಿದೆ.
ಅಪಘಾತದಲ್ಲಿ ಓಂಕಾರ ಮಾಂಡ್ರಿ (26), ರೇಷ್ಮಾ ಶ್ರೀಕಾಂತ ಮಾಂಡ್ರಿ (32) ಹಾಗೂ ದೇವಾಂಶ ಶ್ರೀಕಾಂತ ಮಾಂಡ್ರಿ (4) ಮೃತಪಟ್ಟಿದ್ದಾರೆ. ಶ್ರೀಕಾಂತ, ವಂದನಾ ಮತ್ತು ಹರ್ಷದ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿದುಬರಬೇಕಿದೆ.