ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಫೀಜುರ್ ರೆಹಮಾನ್ (57) ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಫೀಜುರ್ ರೆಹಮಾನ್ (57) ಎಂಬುವವರು ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.
ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಅವರನ್ನು ತುಳಿದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೇಲೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೇವಲ ಮೂರು ದಿನಗಳ ಅಂತರದಲ್ಲಿ ಬೇಲೂರು ಭಾಗದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಶನಿವಾರ ಚೌಡನಹಳ್ಳಿ ಗ್ರಾಮದ ಜಯಮ್ಮ ಕೂಡ ಕಾಡಾನೆ ದಾಳಿಗೆ ಮೃತಪಟ್ಟಿದ್ದರು. ಬಳಿಕ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು, ರೈತ ಸಂಘ ಹಾಗೂ ಕಾಫಿ ಬೆಳೆಗಾರರು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಬೇಲೂರು ಭಾಗದಲ್ಲಿರುವ ಕಾಡಾನೆಗಳನ್ನು ಭದ್ರಾ ಅರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸುವುದಾಗಿ ಸಿಸಿಎಫ್ ಏಡುಕುಂಡಲ ಘೋಷಿಸಿದ್ದರು. ಕುಮ್ಕಿ ಆನೆಗಳ ಸಹಾಯದಿಂದ ಕಾರ್ಯಾಚರಣೆ ನಡೆಸುವ ಯೋಜನೆಯೂ ಇತ್ತು ಎಂದು ವರದಿಯಾಗಿದೆ.
ಆದರೆ ಮತ್ತೊಂದು ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮತ್ತೆ ಪ್ರತಿಭಟನೆಗೆ ಇಳಿದಿದ್ದಾರೆ. ಬೇಲೂರು ತಾಲೂಕು ಆಸ್ಪತ್ರೆ ಎದುರು ನೂರಾರು ಜನರು ಜಮಾಯಿಸಿ, ಮೃತದೇಹವನ್ನು ಘಟನಾ ಸ್ಥಳಕ್ಕೆ ಕೊಂಡೊಯ್ಯುವಂತೆ ಒತ್ತಾಯಿಸಿದ್ದಾರೆ. ಅಂಬುಲೆನ್ಸ್ ಸಂಚಾರಕ್ಕೂ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಹಾಗೂ ಘೋಷಿಸಿರುವ ಕಾರ್ಯಾಚರಣೆಯನ್ನು ತಕ್ಷಣ ಆರಂಭಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಮತ್ತು ಸರ್ಕಾರವನ್ನು ಆಗ್ರಹಿಸಿದ್ದಾರೆ.