Vijayanagara : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದ ಬಳಿ ಕಾಲುವೆಯಲ್ಲಿ ಈಜಲು ತೆರಳಿದ್ದ 16 ಮತ್ತು 12 ವರ್ಷದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
Vijayanagara : ಅಜ್ಜಿ ಮನೆಗೆ ಬಂದಿದ್ದ ಇಬ್ಬರು ಬಾಲಕರು ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿರುವ ದುರ್ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಬುಕ್ಕಸಾಗರ ಗ್ರಾಮದ ಬಳಿ ನಡೆದಿದೆ.
ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಎಚ್. ವೀರಾಪುರ ಗ್ರಾಮದ ಸತೀಶ್ (16) ಮತ್ತು ಫಕ್ಕೀರಪ್ಪ (12) ಮೃತಪಟ್ಟ ಬಾಲಕರು.
ಇಬ್ಬರೂ ಕೊಪ್ಪಳ ಜಿಲ್ಲೆಯ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ವಾಪಸಾಗುವ ವೇಳೆ ಬುಕ್ಕಸಾಗರದಲ್ಲಿರುವ ಅಜ್ಜಿಯ ಮನೆಯಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಗ್ರಾಮದ ಸಮೀಪದ ಕಾಲುವೆಯಲ್ಲಿ ಈಜಲು ತೆರಳಿದ್ದಾರೆ ಎನ್ನಲಾಗಿದೆ. ನೀರಿನಲ್ಲಿ ಮುಳುಗಿದ್ದ ಇಬ್ಬರನ್ನೂ ಸ್ಥಳೀಯರು ಹೊರತೆಗೆದಿದ್ದಾರೆ.
ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.