ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಊರುಗಳತ್ತ ಜನರು ತೆರಳುತ್ತಿದ್ದು, ತುಮಕೂರು ರಸ್ತೆಯಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿದೆ. 

ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿಯಿಂದ ಜನರು ತಮ್ಮ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ. ಹೀಗಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ, ಪ್ರಯಾಣಿಕರು ಟ್ರಾಫಿಕ್ ಜಾಮ್‌ನಿಂದ ಪರದಾಡುವಂತಾಗಿದೆ.


ವಿಶೇಷವಾಗಿ ತುಮಕೂರು ರಸ್ತೆಯಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿವೆ. ಯಶವಂತಪುರ ಫ್ಲೈಓವರ್‌ನಿಂದಲೇ ವಾಹನ ದಟ್ಟಣೆ ಆರಂಭವಾಗಿದ್ದು, ಹೆದ್ದಾರಿಯಲ್ಲಿ ವಾಹನಗಳು ನಿಧಾನವಾಗಿ ಚಲಿಸುತ್ತಿವೆ. ಬೆಂಗಳೂರು ನಗರವನ್ನು ದಾಟಲು ವಾಹನ ಸವಾರರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನು ಹಬ್ಬದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 2,600 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರ ಟಿಟಿಎಂಸಿ ಸೇರಿದಂತೆ ಪ್ರಮುಖ ನಿಲ್ದಾಣಗಳಿಂದ ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ.


ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರಮುಖ ನಗರಗಳಿಗೂ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ.

ಒಟ್ಟಿನಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪ್ರಮುಖ ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಮುಂದುವರಿದಿದೆ. ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಹೆಚ್ಚುವರಿ ಸಮಯ ಮೀಸಲಿಡುವಂತೆ ಸೂಚಿಸಲಾಗಿದೆ.