ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 

ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಗಂಗಾವತಿ ನಿವಾಸಿ ಅಮರ್ ಚೌಸ್ (32), ಅವರ ಪುತ್ರ ಅಮನ್ (9) ಮತ್ತು ಪುತ್ರಿ ಅಮಯ್ ಯಾರಾ (6) ಮೃತ ದುರ್ದೈವಿಗಳು.

ಕುಟುಂಬದ ಕಲಹದ ಹಿನ್ನೆಲೆಯಲ್ಲಿ ಅಮರ್ ಚೌಸ್ ಅವರ ಪತ್ನಿ ಕೊಪ್ಪಳದಲ್ಲಿರುವ ತವರು ಮನೆಗೆ ಬಂದಿದ್ದರು ಎನ್ನಲಾಗಿದೆ. ಪತ್ನಿಯನ್ನು ಕರೆದುಕೊಂಡು ಹೋಗಲು ಕೊಪ್ಪಳಕ್ಕೆ ಬಂದಿದ್ದ ಅಮರ್ ಚೌಸ್ ಅವರ ನಡುವೆ ಮತ್ತೆ ಜಗಳ ನಡೆದಿದೆ ಎಂದು ವರದಿಯಾಗಿದೆ.

ಬಳಿಕ ತಡರಾತ್ರಿ ಇಬ್ಬರು ಮಕ್ಕಳೊಂದಿಗೆ ಬೈಕ್‌ನಲ್ಲಿ ಗಂಗಾವತಿಗೆ ಹಿಂದಿರುಗುತ್ತಿದ್ದ ವೇಳೆ ಗಿಣಿಗೇರಾ ಗ್ರಾಮದ ಸಮೀಪ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ತಂದೆ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.