ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಜಯಮ್ಮ ಮತ್ತು ರೆಹಮಾನ್ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. \

ಬೇಲೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕಾಡಾನೆ-ಮಾನವ ಸಂಘರ್ಷ ತೀವ್ರಗೊಂಡಿದ್ದು, ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಸಾಲುಸಾಲು ಸಾವುಗಳಿಂದ ರೈತರು, ಕಾಫಿ ಬೆಳೆಗಾರರು ಹಾಗೂ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದೆ.

ಶನಿವಾರ ಬಿಕ್ಕೋಡು ಹೋಬಳಿಯ ಚೌಡನಹಳ್ಳಿ ಗ್ರಾಮದ ಜಯಮ್ಮ ಕಾಡಾನೆ ದಾಳಿಗೆ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಸೋಮವಾರ ಬೆಳಗ್ಗೆ ಅರೇಹಳ್ಳಿ ಹೋಬಳಿಯ ನಾಗೇನಹಳ್ಳಿ ಹಿರೇಹಸಿಡೆ ಗ್ರಾಮದ ತೋಟದ ಮಾಲೀಕ ರೆಹಮಾನ್ ಅಲಿಯಾಸ್ ಬಾಬು (45) ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.


ಘಟನೆ ಖಂಡಿಸಿ ಬೇಲೂರು ಸಾರ್ವಜನಿಕ ಆಸ್ಪತ್ರೆಯ ಎದುರು ಕುಟುಂಬಸ್ಥರು, ರೈತರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕೇವಲ ಪರಿಹಾರ ನೀಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಕಾಡಾನೆಗಳನ್ನು ಸೆರೆಹಿಡಿದು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಿ, ಜನರ ಜೀವ ರಕ್ಷಣೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅರಣ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಹಾಸನ ಅರಣ್ಯ ವಿಭಾಗದಲ್ಲಿ 10 ಗಂಡಾನೆಗಳನ್ನು ಸೆರೆಹಿಡಿದು ಸೂಕ್ತ ಆವಾಸಸ್ಥಾನಕ್ಕೆ ಸ್ಥಳಾಂತರಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡಿದ್ದಾರೆ. ಕಾರ್ಯಾಚರಣೆಗೆ ಸಾಕಾನೆಗಳ ತಂಡ ಬಳಸಿಕೊಳ್ಳುವಂತೆಯೂ ಸೂಚಿಸಲಾಗಿದೆ.


ಆದರೆ ಅನುಮತಿ ದೊರೆತಿದ್ದರೂ ಕಾರ್ಯಾಚರಣೆ ಯಾವಾಗ ಆರಂಭವಾಗಲಿದೆ? ಜನವಸತಿ ಪ್ರದೇಶಗಳಿಗೆ ಆನೆಗಳು ನುಗ್ಗದಂತೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ? ಎಂಬ ಪ್ರಶ್ನೆಗಳು ಗ್ರಾಮಸ್ಥರನ್ನು ಕಾಡುತ್ತಿವೆ.

ಎರಡು ದಿನಗಳಲ್ಲಿ ಸಂಭವಿಸಿದ ಎರಡು ಸಾವುಗಳು ಮಲೆನಾಡಿನ ಕಾಡಾನೆ-ಮಾನವ ಸಂಘರ್ಷದ ಗಂಭೀರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿವೆ. ಭರವಸೆಗಳು ಕಾರ್ಯರೂಪಕ್ಕೆ ಬರಲಿ, ಮತ್ತೊಂದು ಜೀವ ಬಲಿಯಾಗುವ ಮುನ್ನ ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಲಿ ಎಂಬುದು ಸ್ಥಳೀಯರ ಆಗ್ರಹವಾಗಿದೆ.