ರೈಲ್ವೆ ಕಾಮಗಾರಿ ವೇಳೆ ಮಣ್ಣು ಕುಸಿತ – ತಾಂತ್ರಿಕ ಸಿಬ್ಬಂದಿ ಸಾವು, ಮತ್ತೊಬ್ಬರಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ರೈಲ್ವೆ ಅಂಡರ್ ಬ್ರಿಡ್ಜ್ ಕಾಮಗಾರಿ ವೇಳೆ ಮಣ್ಣು ಕುಸಿದು ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಂಡೇಲಿ ತಾಲೂಕಿನ ಕರ್ಕಾ–ಬರ್ಚಿ ರೈಲ್ವೆ ಮಾರ್ಗದ ಅಳ್ನಾವರ–ಅಂಬೇವಾಡಿ ಸೆಕ್ಷನ್ನ ಎಲ್ಸಿ ನಂ. 11ರಲ್ಲಿ ಅಂಡರ್ ಬ್ರಿಡ್ಜ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕಾಮಗಾರಿಗಾಗಿ ತೆಗೆದು ಹಾಕಲಾಗಿದ್ದ ಮಣ್ಣು ಏಕಾಏಕಿ ಕುಸಿದಿದೆ ಎನ್ನಲಾಗಿದೆ.
ಮಣ್ಣಿನಡಿ ಸಿಲುಕಿದ ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿ, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದ ಮಹೇಶ ಶೇಖಪ್ಪ ತಳವಾರ (33) ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಸೀನಿಯರ್ ಸೆಕ್ಷನ್ ಎಂಜಿನಿಯರ್ ಮಕ್ತುಂ ಹುಸೇನ್ ಮಹಮ್ಮದ್ ಹುಸೇನ್ ಮುಲ್ಲಾ (57) ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಿಪಿಐ ಶಿವಾನಂದ ಅಂಬಿಗೇರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.